ಬೆಂಗಳೂರು, ಮಾ.07 (DaijiworldNews/AK) : ʻಗುರಿ-ಒಲಿಂಪಿಕ್ ಪದಕʼ ಯೋಜನೆ ಅಡಿಯಲ್ಲಿ ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನು 3 ವರ್ಷಗಳ ವರೆಗೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಈ ಬಾರಿ ಬಜೆಟ್ನಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಬಂಪರ್ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ. ಅದರಂತೆ ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ಕೈಗೊಳ್ಳಲು ವಾರ್ಷಿಕ ತಲಾ 10 ಲಕ್ಷ ರೂ.ನಂತೆ ಪ್ರೋತ್ಸಾಹ ಧನವನ್ನ ಮೂರು ವರ್ಷ ನೀಡಲಾಗುವುದು. ಅದಕ್ಕಾಗಿ ಪ್ರಸಕ್ತ ವರ್ಷಕ್ಕೆ 6 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.
ಅಲ್ಲದೇ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು. ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಪ್ರತಿ ವಷ ಕ್ರೀಡಾಕೂಟ ಆಯೋಜಿಸಲಾಗುವುದು. 2025-26ನೇ ಸಾಲಿನಲ್ಲಿ ಈ ಉದ್ದೇಶಕ್ಕೆ 2 ಕೋಟಿ ರೂ. ಒದಗಿಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆದಿನಾರಾಯಣ ಹೊಸಹಳ್ಳಿಯಲ್ಲಿರುವ 20 ಎಕರೆ ನಿವೇಶನದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಹಾಗೂ ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು 5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ನಂತೆ ಒಟ್ಟು 6 ಕೋಟಿ ರೂ. ಒದಗಿಸಲಾಗುವುದು. ನಿವೇಶನ ಲಭ್ಯವಿರುವ 12 ತಾಲ್ಲೂಕು ಕೇಂದ್ರಗಳಿಗೆ ತಲಾ 2 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಟ್ಟು 12 ಕೋಟಿ ರೂ ಒದಗಿಸಲಾಗುವುದು.
ಯಲಬುರ್ಗಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲ್ಲೂಕು ಕ್ರೀಡಾಂಗಣ ಹಾಗೂ ಟಿ.ನರಸೀಪುರ ತಾಲ್ಲೂಕು ಕ್ರೀಡಾಂಗಣವನ್ನು 6 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದರಂತೆ ಜಿಲ್ಲಾ ಕ್ರೀಡಾಂಗಣಗಳಲ್ಲಿ ಶೂಟಿಂಗ್ ರೇಂಜ್ ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮೈಸೂರು ಮತ್ತು ಬೆಳಗಾವಿಯಲ್ಲಿ ಹೊಸದಾಗಿ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು 7 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಬೆಂಗಳೂರಿನ ವಿದ್ಯಾನಗರದಲ್ಲಿರುವ ಈಜುಕೊಳವನ್ನು ಹೀಟಿಂಗ್ ಮತ್ತು ಡೈವಿಂಗ್ ಪೂಲ್ ವ್ಯವಸ್ಥೆಗಳನ್ನೊಳಗೊಂಡು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಚಾಮರಾಜನಗರದಲ್ಲಿ ಒಲಿಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೈಸೂರಿನಲ್ಲಿ ಕುಸ್ತಿ, ವಾಲಿಬಾಲ್, ಖೋಖೋ ಅಕಾಡೆಮಿಗಳನ್ನು ಸ್ಥಾಪಿಸಲು 2 ಕೋಟಿ ರೂ. ಒದಗಿಸಲಾಗುವುದು.
ಕ್ರೀಡಾಪಟುಗಳು ತರಬೇತಿ ಪಡೆಯಲು ಹಾಗೂ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಸಹಕಾರಿಯಾಗುವಂತೆ ಶಾಲಾ-ಕಾಲೇಜುಗಳ (ವೃತ್ತಿಪರ ಕಾಲೇಜುಗಳು ಸೇರಿದಂತೆ) ವಾರ್ಷಿಕ ಹಾಜರಾತಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗಿನ ಕ್ರೀಡಾಪಟುಗಳಿಗೆ ಶೇ.15 ರಷ್ಟು ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಶೇ.5ರಷ್ಟು ಕೃಪಾಂಕವನ್ನು ವೃತ್ತಿಪರ, ಪದವಿ ಮತ್ತು ಉನ್ನತ ಶಿಕ್ಷಣದ ಪ್ರವೇಶದಲ್ಲಿ ನೀಡಲಾಗುವುದು.
ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಶಾಲೆಗಳಲ್ಲಿ ಆಟದ ಮೈದಾನ ನಿರ್ಮಿಸಲು ತಲಾ 5 ಲಕ್ಷ ರೂ. ವರೆಗೆ ನೆರವು ನೀಡಲಾಗುವುದು. ನಿವೃತ್ತಿ ಹೊಂದಿದ ಕುಸ್ತಿಪಟುಗಳಿಗೆ ನೀಡಲಾಗುತ್ತಿರುವ ಮಾಸಾಶನವನ್ನು, ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಿಗೆ 6,000 ರೂ.ಗಳಿಗೆ, ರಾಷ್ಟ್ರ ಮಟ್ಟದ ಕುಸ್ತಿಪಟುಗಳಿಗೆ 5,000 ರೂ.ಗಳಿಗೆ ಹಾಗೂ ರಾಜ್ಯ ಮಟ್ಟದ ಕುಸ್ತಿಪಟುಗಳಿಗೆ 4,500 ರೂ. ಗಳಿಗೆ ಹೆಚ್ಚಿಸಲಾಗುವುದು.
ಒಲಿಂಪಿಕ್ಸ್, ಕಾಮನ್ ವೆಲ್ತ್ ಹಾಗೂ ಏಷಿಯನ್ ಗೇಮ್ಸ್ಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳ ಸೇವೆಯನ್ನು ವಿವಿಧ ಕ್ರೀಡಾ ಸಂಸ್ಥೆಗಳಲ್ಲಿ ಮಾರ್ಗದರ್ಶಕರಾಗಿ ಪಡೆಯಲಾಗುವುದು ಎಂದು ಕ್ರೀಡಾ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚಿನ ಉತ್ತೇಜನ ನೀಡಿದ್ದಾರೆ.