ದುಬೈ, ಮಾ.09 (DaijiworldNews/AA): 12 ವರ್ಷಗಳ ನಂತರ ಟೀಂ ಇಂಡಿಯಾ ರೋಹಿತ್ ಶರ್ಮಾ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿತ್ತು. ನ್ಯೂಜಿಲೆಂಡ್ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು.
ನ್ಯೂಜಿಲೆಂಡ್ ನ 251 ರನ್ ಮೊತ್ತದ ಗುರಿ ಬೆನ್ನಟ್ಟಿದ ಭಾರತ 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಯಿತು. ಸಂಘಟಿತ ಬೌಲಿಂಗ್, ಉತ್ತಮ ಬ್ಯಾಟಿಂಗ್ ಪ್ರದರ್ಶನದೊಂದಿಗೆ ಕಿವೀಸ್ ವಿರುದ್ಧ ಭಾರತ ಗೆಲುವು ಸಾಧಿಸಿತು.
ಇನ್ನು ಭಾರತ ತಂಡವು ಇಂದು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಳೆದ 9 ತಿಂಗಳೊಳಗೆ ಎರಡನೇ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಬಳಿಕ, ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ 12 ವರ್ಷಗಳ ನಂತರ ಮತ್ತೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.