ಸಿಡ್ನಿ, ಡಿ.02 (DaijiworldNews/PY): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಈವರೆಗೆ ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 12 ಸಾವಿರ ರನ್ಗಳ ಗಡಿಯನ್ನು ದಾಟಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಅವರಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ 23 ರನ್ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು 300 ಇನ್ನಿಂಗ್ಸ್ನಲ್ಲಿ 12 ಸಾವಿರ ರನ್ ಗಳಿಸಿದ್ದರೆ, ವಿರಾಟ್ ಕೊಹ್ಲಿ 251 ಪಂದ್ಯಗಳ ಪೈಕಿ 242 ಇನ್ನಿಂಗ್ಸ್ಗಳಲ್ಲಿ 12 ಸಾವಿರ ರನ್ ಪೂರ್ಣಗೊಳಿಸಿದ್ದಾರೆ.
ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ 336 ಇನ್ನಿಂಗ್ಸ್, ಸನತ್ ಜಯಸೂರ್ಯ 379 ಇನ್ನಿಂಗ್ಸ್ ಹಾಗೂ ಮಹೇಲಾ ಜಯವರ್ಧನೆ 399, ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ 314 ಇನ್ನಿಂಗ್ಸ್ ಗಳಲ್ಲಿ 12 ಸಾವಿರ ರನ್ ಗಳಿಸಿದ್ದರು.