ವಿಶಾಖಪಟ್ಟಣ, ಫೆ 5(DaijiworldNews/SK): ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಮ್ ಬ್ಯಾಕ್ ಮಾಡಿದ ಟೀಂ ಇಂಡಿಯಾ, 106 ರನ್ ಗಳ ಭರ್ಜರಿ ಗೆಲುವು ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಜಿಗಿದಿದೆ. .
ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ಗೆ 399 ರನ್ಗಳ ಟಾರ್ಗೆಟ್ ನೀಡಿದ ಭಾರತ, 2ನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 292 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಮೊದಲ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಂಡ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 1-1 ಅಂತರದ ಸಮಬಲ ಸಾಧಿಸಿತು.
ಮೊದಲ ಇನ್ನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕ, ಎರಡನೇ ಇನ್ನಿಂಗ್ಸ್ನಲ್ಲಿ ಶುಭ್ಮನ್ ಗಿಲ್ ಶತಕ ಹಾಗೂ ಕೊನೆಯ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ತಲಾ ಮೂರು ವಿಕೆಟ್ಗಳ ಕಬಳಿಸುವಿಕೆ ನೆರವಿನಿಂದ ಭಾರತ ತಂಡವು ಎರಡನೇ ಟೆಸ್ಟ್ ಪಂದ್ಯದ ಸೋಮವಾರದ ನಾಲ್ಕನೇ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 106 ರನ್ಗಳಿಂದ ಮಣಿಸಿತು.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ 10 ಪಂದ್ಯಗಳಿಂದ 66 ಅಂಕ ಕಲೆ ಹಾಕಿ ಮೊದಲ ಸ್ಥಾನ ಪಡೆದರೇ 6 ಪಂದ್ಯಗಳಿಂದ ಭಾರತ 38 ಅಂಕ ಕಲೆ ಹಾಕಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.