ದೆಹಲಿ, ಮೇ 29(DaijiworldNews/AA): ಈ ಬಾರಿಯ ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಆದ ಬೆನ್ನಲ್ಲೇ ಟೀಂ ಇಂಡಿಯಾದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ ಅವರು ನೇಮಕವಾಗುವುದು ಬಹುತೇಕ ಖಚಿತವಾಗಿದೆ.
ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಐಪಿಎಲ್ನ ಮಾಲೀಕರೊಬ್ಬರು ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಂ ಇಂಡಿಯಾವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ತಿಳುವಳಿಕೆ ಹೊಂದಿರುವುದು ಅಗತ್ಯ. ಹೀಗಾಗಿ ಟೀಂ ಇಂಡಿಯಾದ ಕೋಚ್ ಆಗಿ ಭಾರತೀಯರೊಬ್ಬರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದರು.
ಇದೀಗ ಭಾರತದ ಮುಖ್ಯ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಅವರ ನೇಮಕವನ್ನು ಐಪಿಎಲ್ ಮಾಲೀಕರು ದೃಢಪಡಿಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಭಾರತ ತಂಡದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಬಹುತೇಕ ದೃಢಪಟ್ಟಿದೆ.